ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ ನಿಧನ, ರಾಜಕೀಯ ಗಣ್ಯರಿಂದ ಸಂತಾಪ

by | 11/03/23 | ಸುದ್ದಿ

ಮೈಸೂರು ; ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್,ಧೃವನಾರಾಯಣ್ (61) ಅವರಿಗೆ ಬೆಳಗ್ಗೆ 6.40ಕ್ಕೆ ಕಾರಿನಲ್ಲಿ ತೆರಳುವಾಗ ಹೃದಯಾಘಾತವಾಗಿದ್ದು ಮೈಸೂರಿನ ಡಿಆರ್​​ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನ ಹಿನ್ನೆಲೆ ಕಾಂಗ್ರೆಸ್ ರಾಮನಗರ, ದಾವಣಗೆರೆ ಜಿಲ್ಲೆಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ. ಮತ್ತೊಂದೆಡೆ ಧ್ರುವನಾರಾಯಣ ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ, ಶಾಸಕ ಜಿ.ಟಿ.ದೇವೇಗೌಡ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.

ಧ್ರುವನಾರಾಯಣ ಅವರ ಸಾವಿಗೆ ಸಂತಾಪ ಸೂಚಿಸಿದ ಸಿಎಂ
ಧ್ರುವನಾರಾಯಣ ಅವರು ತುಂಬಾ ಕ್ರೀಯಾಶೀಲರಾಗಿರುತ್ತಿದ್ದರು. ಅವರು ಹೃದಯಘಾತದಿಂದ ನಿಧನ ಹೊಂದಿರುವುದು ಆಘಾತವಾಗಿದೆ. ಚಾಮರಾಜನಗರ ಭಾಗದಲ್ಲಿ ತುಂಬಾ ಚಟುವಟಿಕೆಯಿಂದ ಕೆಲಸ ಮಾಡಿಕೊಂಡಿದ್ರು. ಅವರಿಗೆ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನೆರವೇರಿಸಲಾಗುವುದು ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

ಆರ್​.ಧ್ರುವನಾರಾಯಣ ನಿಧನಕ್ಕೆ ಶಾಸಕ ಜಿ.ಟಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಾಂತವಾಗಿದೆ. ಎಂದೂ ಕೂಡ ದ್ವೇಷದ ರಾಜಕಾರಣ ಮಾಡಿದವರಲ್ಲ. ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಅಭಿವೃದ್ಧಿ ಕೆಲಸಗಳಿಂದ ಜಿಲ್ಲೆಯ ಜನರ ಮನಸು ಗೆದ್ದಿದ್ದರು. ಸ್ನೇಹಿತನ ಅಗಲಿಕೆಯಿಂದ ತುಂಬಾ ದುಃಖ ಆಗಿದೆ. ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಶಾಸಕ ಜಿ.ಟಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಆತ್ಮೀಯ ಸ್ನೇಹಿತರಾಗಿದ್ದ ಆರ್. ಧ್ರುವ ನಾರಾಯಣ ಅವರ ಅಕಾಲಿಕ ನಿಧನ ತುಂಬಾ ನೋವು ಉಂಟುಮಾಡಿದೆ. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಧ್ರುವ ನಾರಾಯಣ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತ ಅವರ ಮತ್ತು ಅವರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಹೆಚ್​ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *