ಜನಸಾಮಾನ್ಯರು ಸಮಸ್ಯೆಗಳನ್ನು ಹೊತ್ತುಕೊಂಡು ಬೆಂಗಳೂರಿಗೆ ತಮ್ಮನ್ನು ಹುಡುಕಿಕೊಂಡು ಬರುವ ಅಗತ್ಯವಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು

by | 12/09/23 | ಕರ್ನಾಟಕ


ಬೆಂಗಳೂರು, ಸೆ 12- ಜಿಲ್ಲಾಧಿಕಾರಿಗಳು ಸೇರಿದಂತೆ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಆಡಳಿತ ವ್ಯವಸ್ಥೆ ಸಮರ್ಪಕವಾಗಿ ಕೆಲಸ ಮಾಡಿದರೆ ಜನಸಾಮಾನ್ಯರು ಸಮಸ್ಯೆಗಳನ್ನು ಹೊತ್ತುಕೊಂಡು ಬೆಂಗಳೂರಿಗೆ ತಮ್ಮನ್ನು ಹುಡುಕಿಕೊಂಡು ಬರುವ ಅಗತ್ಯವಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ . ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ.

ಬಿ.ವೈ.ವಿಜಯೇಂದ್ರಗೆ ಒಲಿಯುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ..?

ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ. ಕೆಲವೊಂದು ಸಮಸ್ಯೆಗಳಿಗೆ ವಾರದ ಕಾಲ ಮಿತಿಯಲ್ಲಿ ಪರಿಹಾರ ಒದಗಿಸಿ ಕೊಡಿ. ಕೆಲಸ ಆಗಿದೆಯಾ, ಇಲ್ಲವಾ ಎನ್ನುವುದನ್ನು ಮರು ಪರೀಕ್ಷಿಸಿ. ಆಗ ಸ್ಥಳೀಯ ಸಮಸ್ಯೆಗಳಿಗಾಗಿ ಜನತೆ ಬಸ್ ಚಾರ್ಜ್ ಖರ್ಚು ಮಾಡಿಕೊಂಡು ನನ್ನ ತನಕ ಬರುವ ಅಗತ್ಯವೇ ಬೀಳುವುದಿಲ್ಲ ಎಂದು ತಿಳಿಸಿದರು.

ಕೇವಲ ಬದಲಾವಣೆಗಾಗಿ ನಾಡಿನ ಜನತೆ ಸರ್ಕಾರವನ್ನು ಬದಲಾಯಿಸಿಲ್ಲ. ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರವನ್ನು ಬದಲಾಯಿಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಅಭಿವೃದ್ಧಿಯ ಆಶೋತ್ತರಗಳನ್ನು ಇಟ್ಟುಕೊಂಡ ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕಿದೆ ಎಂದರು.

ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವ್ಯಾರು ರಾಜರುಗಳಲ್ಲ ಎಂಬುದನ್ನು ಅರಿತುಕೊಂಡು ಕೆಲಸ ಮಾಡಿ ಎಂದು ಹೇಳಿದರು.ತಹಸೀಲ್ದಾರ್, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬರುವ ಅರ್ಜಿಗಳು 5 ವರ್ಷಕ್ಕೂ ಹೆಚ್ಚು ಅವಗೆ ಬಾಕಿ ಉಳಿದಿರುವುದನ್ನು ಗಮನಿಸಿದ್ದೇನೆ. 5 ವರ್ಷವಾದರೂ ಪ್ರಕರಣ ಇತ್ಯರ್ಥಪಡಿಸದೆ ಇದ್ದರೆ, ನೀವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅರ್ಥ.

ನ್ಯಾಯ ವಿಳಂಬ ನ್ಯಾಯವನ್ನು ನಿರಾಕರಿಸಿದಂತೆ ಎಂಬ ಮಾತಿನ ಅನುಸಾರ ವಿಳಂಬ ಜಾಸ್ತಿಯಾದಷ್ಟು ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ವಿಳಂಬವೂ ಭ್ರಷ್ಟಾಚಾರವೇ ಆಗಿದೆ. ತಹಸೀಲ್ದಾರರು ಒಂದು ಅರ್ಜಿಯನ್ನು ಸ್ವೀಕರಿಸಿದರೆ, ಮೂರು ತಿಂಗಳಲ್ಲಿ ಇತ್ಯರ್ಥ ಮಾಡಬೇಕು. ಉಪವಿಭಾಗಾಧಿಕಾರಿಗಳ ಬಳಿ ಬರುವ ಮನವಿಗಳ ಇತ್ಯರ್ಥಕ್ಕೆ ಬಹಳ ವಿಳಂಬ ಮಾಡುತ್ತಿದ್ದಾರೆ. ಇದನ್ನು ಕನಿಷ್ಠ ಆರು ತಿಂಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳು ಒಂದು ವರ್ಷದಲ್ಲಿ ಇತ್ಯರ್ಥ ಮಾಡಬೇಕು ಎಂದು ಕಾಲಮಿತಿಯ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಅನಗತ್ಯವಾಗಿ ಪ್ರಕರಣ ಮುಂದೂಡುವುದು, ಕಕ್ಷಿದಾರರನ್ನು ಕಾಯಿಸುವುದು, ವಾದ-ವಿವಾದಗಳನ್ನು ಆಲಿಸಿದ ನಂತರ ತೀರ್ಪು ಬರೆಯಲು ವಿಳಂಬ ಮಾಡುವುದು ತರವಲ್ಲ. ಪ್ರಕರಣ ಇತ್ಯರ್ಥಗೊಳಿಸಲು ವಿಳಂಬ ಮಾಡಿದರೆ ನಮ್ಮ ಸರ್ಕಾರ ಸಹಿಸಲ್ಲ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಕೃಷ್ಣಭೈರೇಗೌಡ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಚೆಲುವರಾಯಸ್ವಾಮಿ, ಎಚ್.ಕೆ.ಪಾಟೀಲ್, ಕೆ.ಎಚ್.ಮುನಿಯಪ್ಪ, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಜಮೀರ್ ಅಹಮ್ಮದ್ಖಾನ್, ಸಂತೋಷ್ ಲಾಡ್, ಕೆ.ವೆಂಕಟೇಶ್, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಎಲ್ಲಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯ್ದ ಇಲಾಖೆಯ ಆಯುಕ್ತರು, ನಿರ್ದೇಶಕರು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *