ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಮೇಲಾಟಗಳ ಕ್ರೀಡಾಕೂಟದಲ್ಲಿ ಜಿ.ಪಂ ಸಿಇಒ ಎಸ್.ಜೆ. ಸೋಮಶೇಖರ್ ಓದಿನ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ

by | 26/09/23 | ಕ್ರೇಡೆ


ಚಿತ್ರದುರ್ಗ ಸೆ.26:
ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳ್ಳುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಹೇಳಿದರು.
ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ 14, 17 ವರ್ಷ ವಯೋಮಿತಿಯೊಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಮೇಲಾಟಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದಿದೆ. ಅದೇ ರೀತಿಯಾಗಿ ಕ್ರೀಡೆಯಲ್ಲೂ ರಾಜ್ಯಕ್ಕೆ ಮೊದಲನೇ ಸ್ಥಾನ ತರಬೇಕು. ಸೋಲು-ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯವಾಗಿರುತ್ತದೆ. ಕ್ರೀಡಾ ಕ್ಷೇತ್ರದಲ್ಲೂ ಹೆಚ್ಚಿನ ಸಾಧನೆ ಮಾಡಬಹುದು ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳಿಂದ ವಿದ್ಯಾರ್ಥಿಗಳು ಕ್ರೀಡೆಯ ಬಗ್ಗೆ ಆಸಕ್ತಿ ಕಳೆದುಕೊಂಡಿದ್ದಾರೆ ಎಂದು ತಿಳಿಸಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದವರೆಗೂ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಾರುತೇಶ್ ಮಾತನಾಡಿ, ಸೋಲೇ ಗೆಲುವಿನ ಮೆಟ್ಟಿಲು. ಆದ್ದರಿಂದ ಕ್ರೀಡೆಯಲ್ಲಿ ಭಾಗವಹಿಸಿ ಮುಂದಿನ ದಿನಗಳಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಬೆಳೆಯಬೇಕು. ವಿದ್ಯಾರ್ಥಿಗಳು ದೈಹಿಕ ಶಿಕ್ಷಣ ಶಿಕ್ಷಕರಿಂದ ಸರಿಯಾದ ರೀತಿಯಲ್ಲಿ ತರಬೇತಿ ಪಡೆದು, ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾಮಟ್ಟದ ಶಾಲಾ ಮಕ್ಕಳ ಪಂದ್ಯಾವಳಿಯಲ್ಲಿ ಜಿಲ್ಲೆಯ ಆರು ತಾಲ್ಲೂಕಿನ ಕ್ರೀಡಾಪಟುಗಳು ಭಾಗವಹಿಸದ್ದರು. ಮೊದಲ ದಿನದ ಕ್ರೀಡಾಕೂಟದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡೆಗಳು ನಡೆದವು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ, ಕಾರ್ಯಾಧ್ಯಕ್ಷ ಎಸ್.ವೀರಣ್ಣ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಂದ್ರಪ್ಪ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಪರಶುರಾಮಪ್ಪ ಸೇರಿದಂತೆ ದೈಹಿಕ ಶಿಕ್ಷಣ ಶಿಕ್ಷಕರು, ಜಿಲ್ಲಾ ಹಾಗೂ ತಾಲ್ಲೂಕು ಎಲ್ಲಾ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು ಮತ್ತು ಕ್ರೀಡಾಪಟುಗಳು ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *