ತಾಲ್ಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ ಡಾ. ರಂಗನಾಥ್

by | 21/02/23 | ಆರೋಗ್ಯ

ಚಿತ್ರದುರ್ಗ ಫೆ.21 : ಗರ್ಭಿಣಿಯರಿಗಾಗಿ ಅನುಕೂಲಕ್ಕಾಗಿ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗಿದೆ. ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ತಾಲ್ಲೂಕು ಆರೋಗ್ಯ ಕೇಂದ್ರಗಳು ಸೇರಿದಂತೆ ಹೊರ ರೋಗಿಗಳ ಸಂಖ್ಯೆ ಹೆಚ್ಚಿರುವ ಧರ್ಮಪುರ, ನಾಯಕನಹಟ್ಟಿ, ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳನ್ನು ಶೀಘ್ರದಲ್ಲೇ ಅಳವಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ರಂಗನಾಥ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಗರ್ಭಧಾರಣಾ ಪೂರ್ವ ಮತ್ತು ಪ್ರಸರ್ವ ಪೂರ್ವ ಲಿಂಗಪತ್ತೆ ತಂತ್ರವಿಧಾನಗಳ ನಿಷೇಧ (ಪಿಸಿ & ಪಿಎನ್‍ಡಿಟಿ) ಕಾಯ್ದೆ ಅನುಷ್ಠಾನ ಕುರಿತ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸರ್ಕಾರಿ-07 ಹಾಗೂ ಖಾಸಗಿ-55 ಸೇರಿದಂತೆ ಒಟ್ಟು 62 ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳು ವಿವಿಧ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಚಿತ್ರದುರ್ಗ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಮಾತ್ರ ರೆಡಿಯಾಲಜಿಸ್ಟಿ ಇದ್ದು, ಉಳಿದ ತಾಲೂಕು ಆಸ್ಪತ್ರೆಗಳಲ್ಲಿ ಸ್ತ್ರೀ ರೋಗ ತಜ್ಞರಿಗೆ ಸ್ಕ್ಯಾನಿಂಗ್ ತರಬೇತಿ ನೀಡಲಾಗಿದೆ. ತಾಲೂಕು‌ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳು ಅಳವಡಿಕೆಯಿಂದ ಗ್ರಾಮೀಣ ಭಾಗದ ಗರ್ಭಿಣಿಯರು ನಗರಗಳಿಗೆ ಬರುವುದು ತಪ್ಪುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಕೇಂದ್ರಗಳ ಮಾಹಿತಿಯನ್ನು ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು. ಪಿಸಿ & ಪಿಎನ್‍ಡಿಟಿ ಕಾಯ್ದೆಯನ್ವಯ ನಿಯಮಾನುಸಾರ ಅನುಮತಿ ಪಡೆದು, ನಡೆಯುತ್ತಿರುವ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಕೇಂದ್ರಗಳು ಪ್ರತಿಯೊಂದು ಸ್ಕ್ಯಾನಿಂಗ್ ಪ್ರಕರಣಗಳನ್ನು ಕೂಡ ರಿಜಿಸ್ಟರ್ ನಲ್ಲಿ ನಮೂದಿಸಿ, ಆಯಾ ದಿನದಂದೇ ನಮೂನೆ ಎಪ್ ನಲ್ಲಿ ವರದಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸಬೇಕು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ವಿವಿಧ ಸ್ಕ್ಯಾನಿಂಗ್ ಗಳಲ್ಲಿ ಪಡೆಯುವ ಶುಲ್ಕದ ಮಾಹಿತಿಯನ್ನು ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸಬೇಕು. ಒಂದೊಮ್ಮೆ ಪ್ರಕಟಿಸಿದ ದರಕ್ಕಿಂತ ಹೆಚ್ಚಿನ ಶುಲ್ಕ ಪಡೆದರೆ ಅಂತಹ ಕೇಂದ್ರಗಳು ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಸವ ಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನಿಗೆ ವಿರುದ್ಧವಾಗಿದ್ದು ಶಿಕ್ಷಾರ್ಹ ಅಪರಾಧವಾಗಿದೆ. ಪುರುಷ-ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಈ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ಪರಿಣಾಮವಾಗಿ ಜನನ ಸಂದರ್ಭದಲ್ಲಿ 2021-22 ರಲ್ಲಿ 945 ಇದ್ದ ಲಿಂಗಾನುಪತ 2022-23 ರಲ್ಲಿ‌ 965 ಏರಿಕೆಯಾಗಿದೆ ಎಂದು ಹರ್ಷ ವ್ಯಕ್ತ ಪಡಿಸಿದರು.

ಪಿಸಿ & ಪಿಎನ್‍ಡಿಟಿ ಕಾಯ್ದೆ ಕುರಿತಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವೈದ್ಯಾಧಿಕಾರಿಗಳು, ರೆಡಿಯೋಲಾಜಿಸ್ಟಿ, ಸ್ಕ್ಯಾನಿಂಗ್ ಸೆಂಟರ್ ಹಾಗೂ ನರ್ಸ್‌ಗಳಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಸೌಮ್ಯ, ಐ.ಎಂ.ಎ.ಜಿಲ್ಲಾ ಅಧ್ಯಕ್ಷ ಡಾ. ಪಿ.ಟಿ. ವಿಜಯಕುಮಾರ್, ಡಾ.ದೇವರಾಜ್, ಸಲಹಾ ಸಮಿತಿ ಸದಸ್ಯರುಗಳಾದ ಡಾ. ರೇಣುಪ್ರಸಾದ್, ಡಾ. ಸತ್ಯನಾರಾಯಣ, ವಕೀಲರು ಎಂ. ಉಮೇಶ್, ಕೆ.ಪಿ. ಮೀನಾಕ್ಷಿ, ಗಾಯಿತ್ರಿ ಶಿವರಾಂ, ಮೈರಾಡ ಸಂಸ್ಥೆಯ ಸುನೀಲ್ ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *