ಬೆಂಗಳೂರು ಸೆ.12.ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಜನರ ಕಲ್ಯಾಣಕ್ಕಾಗಿ ಹೆಚ್ಚು ಬದ್ಧತೆಯಿಂದ ಕೆಲಸ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಖರ್ಗೆ ಕಿವಿಮಾತು ಹೇಳಿದರು.
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ವಿವಿಧ ಬೇಡಿಕೆಗಳ ಕುರಿತು ಸಭೆಯಲ್ಲಿ ಮಾನಾಡಿದರು
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು, ಕಾನೂನು ಚೌಕಟ್ಟು ಮೀರದಂತೆ ವೈಜ್ಞಾನಿಕ ರೀತಿಯಲ್ಲಿ ಪರಿಶೀಲಿಸಿ ಶೀಘ್ರವಾಗಿ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಗೋಜಲಾಗಿದ್ದು, ಹಲವಾರು ಜಿಲ್ಲೆಗಳ ಅಧಿಕಾರಿಗಳು ನ್ಯಾಯಾಲಯಗಳ ಮೊರೆ ಹೋಗಿರುವುದರಿಂದ ಕಗ್ಗಂಟಾಗಿರುವ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿ, ಮುಂದಿನ ಸಾಮಾನ್ಯ ವರ್ಗಾವಣೆ ಸಮಯಕ್ಕೆ ಕೌನ್ಸಲಿಂಗ್ ನೀತಿಯನ್ನು ಜಾರಿಗೆ ತಂದು ವರ್ಗಾವಣೆ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಲಾಗಿದೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲ ಅಧಿಕಾರಿಗಳಿಗೂ ಈ ಸೌಲಭ್ಯ ವಿಸ್ತರಿಸುವುದರ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹಾಗೂ ಅವರ ಸೇವಾ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡಲು ನಿಗದಿತವಾಗಿ ಸಭೆಗಳನ್ನು ನಡೆಸುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಸಂಘದ ಪದಾಧಿಕಾರಿಗಳಿಗೆ ತಿಳಿಸಿದರು.
ಸಂಘದ ಬೇಡಿಕೆಗಳ ವಿಷಯದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನವನ್ನು ನಿರಂತರವಾಗಿ ನಡೆಸಲಿದೆ ಎಂದು ಪಿಡಿಒಗಳ ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.
0 Comments