ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡಬೇಕು : ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್

by | 28/10/23 | ಸುದ್ದಿ


ಹಿರಿಯೂರು ಜನಧ್ವನಿ ವಾರ್ತೆ ಅ.28
ಸಂವಿಧಾನದ 4 ನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೋದ್ಯಮ ಹಾಗೂ ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡುವುದರ ಜೊತೆಗೆ ಸಮಾಜದಲ್ಲಿನ ಜನರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ಮೂಲಕ ಜನರ ಸಮಸ್ಯೆಗಳನ್ನು ಪರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ರೋಟರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ನೂತನ ಹಿರಿಯೂರು ತಾಲ್ಲೂಕು ಘಟಕದ ಉದ್ಘಾಟನೆ, ಪತ್ರಿಕಾ ದಿನಾಚರಣೆ ಹಾಗೂ ಸಾಧಕರ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮೀ ಯೋಜನೆಯಂತಹ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಬರಗಾಲ ನಿರ್ವಹಣೆಗೂ ಸಹ ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ರಾಜ್ಯದ ಜನರ ಶ್ರೇಯೋಭಿವೃದ್ಧಿಯೇ ನಮ್ಮ ಪ್ರಮುಖ ಧ್ಯೇಯವಾಗಿದ್ದು, ನಮ್ಮ ಸರ್ಕಾರ ಜನಪರ ಸರ್ಕಾರವಾಗಿದೆ ಎಂಬುದಾಗಿ ಅವರು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಬಗ್ಲೆಮಲ್ಲಿಕಾರ್ಜುನ್ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಜನಪರ ಯೋಜನೆಗಳಿಗೆ ಸಾವಿರಾರು ಕೋಟಿರೂಗಳ ಹಣಖರ್ಚು ಮಾಡುತ್ತಿದೆ, ಆದರೆ ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ಶ್ರೇಯೋಭಿವೃದ್ಧಿಯನ್ನು ಕಡೆಗಣಿಸಿರುವುದು ನಿಜಕ್ಕೂ ವಿಷಾದನೀಯ ಸಂಗತಿಯಾಗಿದೆ ಎಂದರಲ್ಲದೆ,
ರಾಜ್ಯದಲ್ಲಿ ಸುಮಾರು 16 ಸಾವಿರ ಪತ್ರಕರ್ತರು ಮಾಧ್ಯಮಲೋಕದಲ್ಲಿ ಹಗಲಿರುಳೆನ್ನದೆ ಕಾರ್ಯ ನಿರ್ವಹಿಸುತ್ತಿದ್ದು, ಈ ಪತ್ರಕರ್ತರುಗಳಿಗೆ ಅಗತ್ಯ ಸೌಲಭ್ಯಗಳು ಸೇರಿದಂತೆ ಉಚಿತ ಬಸ್ ಪಾಸ್ ಸೌಲಭ್ಯಕ್ಕಾಗಿ ಕನಿಷ್ಠ 10 ಕೋಟಿ ರೂಗಳನ್ನು ಮೀಸಲಿಡುವಂತೆ ಸರ್ಕಾರವನ್ನು ಒತ್ತಾಯಿಸಿದರಲ್ಲದೆ, ತಾಲ್ಲೂಕಿನಲ್ಲಿ ಪತ್ರಕರ್ತರ ಸಭಾಭವನ ಹಾಗೂ ಪತ್ರಕರ್ತರಿಗೆ ನಿವೇಶನ ಮಂಜೂರು ಮಾಡಬೇಕು ಎಂಬುದಾಗಿ ಸಚಿವರಾದ ಡಿ.ಸುಧಾಕರ್ ರವರಿಗೆ ಮನವಿ ಮಾಡಿದರು.
ಕಾಂಗ್ರೆಸ್ ಸರ್ಕಾರ ನಮ್ಮ ಮನವಿಗೆ ಸ್ಪಂದಿಸದೇ ಹೋದರೆ ರಾಜ್ಯಾದ್ಯಂತ ಸುಮಾರು 16 ಸಾವಿರ ಪತ್ರಕರ್ತರು ಒಟ್ಟಾಗಿ ಸೇರಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ, ಇದಕ್ಕೆ ಅವಕಾಶ ಮಾಡಿಕೊಡದೇ ಪತ್ರಕರ್ತ ಚಿಕ್ಕ ಬೇಡಿಕೆಯನ್ನು ಈಡೇರಿಸುವಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯರವರ ಗಮನ ಸೆಳೆಯಬೇಕು ಎಂಬುದಾಗಿ ಸಚಿವರಾದ ಡಿ.ಸುಧಾಕರ್ ರವರನ್ನು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ರಾಜ್ಯದ ಪತ್ರಕರ್ತರಿಗೆ ಅಗತ್ಯ ಸೌಲಭ್ಯಗಳು ಸೇರಿದಂತೆ ಉಚಿತ ಬಸ್ ಪಾಸ್ ನೀಡಬೇಕೆಂಬ ನಿಮ್ಮ ಬಹುದಿನಗಳ ಬೇಡಿಕೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರಿಗೆ ತಿಳಿಸುವ ಮೂಲಕ ನಿಮ್ಮ ಬೇಡಿಕೆಯನ್ನು ಈಡೇರಿಸುವ ಪ್ರಯತ್ನ ಮಾಡುತ್ತೇನೆ ಎಂಬುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಆಲೂರು ಹನುಮಂತರಾಯಪ್ಪ, ಕಲಾವಿದ ಮಹಲಿಂಗಪ್ಪ ಮಲ್ಲಪ್ಪನಹಳ್ಳಿ, ಎಂ.ಎಸ್.ಸಿ ಅಗ್ರಿಯಲ್ಲಿ ಚಿನ್ನದ ಪದಕ ಪಡೆದ ಅರ್ಪಿತಾ ಗೋಸಿಕೆರೆರಂಗನಾಥ್, ಕವಯಿತ್ರಿ ಸರಸ್ವತಿ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ, ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ದಿನಪತ್ರಿಕೆ, ವಾರಪತ್ರಿಕೆ ವರದಿಗಾರರು ಮತ್ತು ಸಂಪಾದಕರುಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಹೆಚ್.ಎಸ್.ಮಾರುತೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಘಟನೆಯ ಗೌ.ಅಧ್ಯಕ್ಷರಾದ ಐನಹಳ್ಳಿ ಇಬ್ರಾಹಿಂ, ಕಾರ್ಯಾಧ್ಯಕ್ಷರಾದ ಅರ್ಜುನ್ ಬ್ಯಾಡರಹಳ್ಳಿ, ಪ್ರಧಾನ ಕಾರ್ಯದರ್ಶಿ ಜಿ.ಕೆ.ಮಾರುತಿ ಗೂಳ್ಯ, ದ್ಯಾಮರಾಜ್ ಚಳ್ಳಕೆರೆ, ಚಿತ್ರಹಳ್ಳಿ ಶ್ರೀಧರ್, ಎಂ.ರಾಜಪ್ಪ ಜಗಳೂರು, ಸ್ವಾಮಿಲಿಂಗಪ್ಪ ಶಿರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಕಂದಿಕೆರೆ ಸುರೇಶ್ ಬಾಬು, ನಗರಸಭೆ ಸದಸ್ಯರುಗಳಾದ ಈರಲಿಂಗೇಗೌಡರು, ಶಿವಕುಮಾರ್, ವಿಠ್ಠಲ್ ಪಾಂಡುರಂಗ, ಕರ್ನಾಟಕ ಭೀಮಸೇನೆ ಜಿಲ್ಲಾ ಅಧ್ಯಕ್ಷ ರಮೇಶ್ ಮಸ್ಕಲ್ ಮಟ್ಟಿ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ರಾಮಚಂದ್ರಪ್ಪ, ತಾಲ್ಲೂಕು ಅಧ್ಯಕ್ಷ ರಾಘವೇಂದ್ರ, ಪತ್ರಕರ್ತರುಗಳಾದ ಗೋಸಿಕೆರೆ ರಂಗನಾಥ್, ಪಿ.ಆರ್.ಸತೀಶ್ ಬಾಬು, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *