ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ಮಾಹಿತಿ ಡಿಸೆಂಬರ್ 9ರಂದು ರಾಷ್ಟ್ರೀಯ ಲೋಕ ಅದಾಲತ್

by | 26/10/23 | ಕಾನೂನು


ಚಿತ್ರದುರ್ಗ ಅ.26:
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 2023ರ ಡಿಸೆಂಬರ್ 9ರಂದು ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್.ರೇಖಾ ಹೇಳಿದರು.
ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಗುರುವಾರ ರಾಷ್ಟ್ರೀಯ ಲೋಕ್ ಅದಾಲತ್ ಕುರಿತು ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
“ಸರ್ವರಿಗೂ ನ್ಯಾಯ” ಎಂಬ ಧ್ಯೇಯವಾಕ್ಯದೊಂದಿಗೆ ಭಾರತದ ಸರ್ವೋಚ್ಛ ನ್ಯಾಯಾಲಯದ ಅಧಿಪತ್ಯದಲ್ಲಿ ನಡೆಯುತ್ತಿರುವ ಅಂಗ ಸಂಸ್ಥೆಗಳಾದ “ರಾಷ್ಟ್ರಿಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು “ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಡಿಸೆಂಬರ್ 9ರಂದು ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ, ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಆಸ್ತಿ ವಿಭಾಗ, ಬ್ಯಾಂಕ್ ಕ್ಲೇಮ್‍ಗಳು, ವೈವಾಹಿಕ, ಭೂಸ್ವಾಧೀನ, ವೇತನ ಮತ್ತು ಭತ್ಯೆಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಹಾಗೂ ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಬಗೆಹರಿಸಲಾಗುವುದು. ಇದರಿಂದ ಪಕ್ಷಗಾರರಿಗೆ, ಶೀಘ್ರ ನ್ಯಾಯ, ಹಣ ಉಳಿತಾಯ ಆಗಲಿದೆ, ಅಲ್ಲದೆ ರಾಜಿಯಾದ ಪ್ರಕರಣಗಳ ಮೇಲೆ ಯಾವುದೇ ಅಪೀಲಿಗೆ ಅವಕಾಶವಿರುವುದಿಲ್ಲ. ರಾಜಿಯಾದ ಸಿವಿಲ್ ಪ್ರಕರಣಗಳಲ್ಲಿ ಕೋರ್ಟ್ ಶುಲ್ಕ ಹಿಂದಿರುಗಿಸಲಾಗುವುದು. ರಾಜಿ ಸಂಧಾನದ ಮೂಲಕ ತ್ವರಿತವಾಗಿ ಪ್ರಕರಣ ಇತ್ಯರ್ಥಗೊಂಡಲ್ಲಿ, ಉಭಯ ಪಕ್ಷಕಾರರು ಸುಖ, ಸಂತೋಷ, ನೆಮ್ಮದಿಯ ಜೀವನ ನಡೆಸಲು ಅನುಕೂಲವಾಗಲಿದೆ, ಅಲ್ಲದೆ ಆರ್ಥಿಕ ಹೊರೆಯೂ ತಪ್ಪಲಿದೆ ಎಂದರು.
ಸಾರ್ವಜನಿಕರು ಸಾಧ್ಯವಾದಷ್ಟು ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಪರಿಹರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ. ಇದರಿಂದ ಎಲ್ಲರೂ ಖುಷಿಯಿಂದ ಜೀವನ ನಡೆಸಬೇಕು. ರಾಜೀಯಾಗದಂತಹ ಪ್ರಕರಣಗಳನ್ನು ಮಾತ್ರ ನ್ಯಾಯಾಲಯಗಳಲ್ಲಿ ಪ್ರಕರಣ ನಡೆಸುವುದು ಉತ್ತಮ. ಹೆಚ್ಚು ಹೆಚ್ಚು ಪ್ರಕರಣಗಳನ್ನು ರಾಜೀ ಮಾಡಿಕೊಂಡರೆ ಸಮಾಜದಲ್ಲಿ ಒಳ್ಳೆಯ ವಾತಾವರಣ ನಿರ್ಮಾಣವಾಗಲಿದೆ ಎಂದರು.
ಕಳೆದ ಅಕ್ಟೋಬರ್ 01 ರ ಅಂಕಿ ಅಂಶಗಳನ್ವಯ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 40375 ಪ್ರಕರಣಗಳು ಬಾಕಿ ಇವೆ. ಇದರಲ್ಲಿ 1930 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‍ಗೆ ಗುರುತಿಸಿ, ಕಳುಹಿಸಲಾಗಿದೆ. 66 ಪ್ರಕರಣಗಳು ಇತ್ಯರ್ಥಕ್ಕೆ ತೀರ್ಮಾನ ಆಗಿವೆ. ಇನ್ನೂ ಹೆಚ್ಚಿನ ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಕಳುಹಿಸಲಾಗುವುದು. ಜಿಲ್ಲೆಯ ಎಲ್ಲಾ ಪಕ್ಷಗಾರರು ಈ ಬೃಹತ್ ಲೋಕ್ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಯಶಸ್ವಿಗೊಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದೂರವಾಣಿ ಸಂಖ್ಯೆ 08194-222322, 9141193935 ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್.ರೇಖಾ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *