ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಹರ್ಷಿ ವಾಲ್ಮೀಕಿ ಜಯಂತಿ: ಅರ್ಥಪೂರ್ಣ ಆಚರಣೆ

by | 11/10/23 | ಸುದ್ದಿ


ಚಿತ್ರದುರ್ಗ ಅ.11:
ಜಗತ್ತಿಗೆ ಸನ್ಮಾರ್ಗ ತೋರಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅಕ್ಟೋಬರ್ 28 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿ ಅಂಗವಾಗಿ ಅಕ್ಟೋಬರ್ 28 ರಂದು ಬೆಳಿಗ್ಗೆ 10ಕ್ಕೆ ಐತಿಹಾಸಿಕ ಕೋಟೆ ಮುಂಭಾಗದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗಿ ಆನೆಬಾಗಿಲು ಮೂಲಕ, ಗಾಂಧಿವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಲಿದೆ. ಮಧ್ಯಾಹ್ನ 12 ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆಯಲ್ಲಿ ಡೊಳ್ಳು, ವೀರಗಾಸೆ, ಖಾಸಬೇಡರ ಪಡೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದ್ದಾರೆ. ಮುಖ್ಯವಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದಾಗ ಮಾತ್ರ ಜಯಂತಿ ಆಚರಣೆಗಳಿಗೆ ಮೆರುಗು ಬರಲಿದೆ, ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಎಲ್ಲ ಸಮಾಜದವರು ಪಾಲ್ಗೊಳ್ಳಬೇಕು ಎಂದರು.
ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಜಯಂತಿಗೆ ಆಹ್ವಾನಿಸಲಾಗುವುದು. ಉತ್ತಮ ವಾಗ್ಮಿಗಳಿಂದ ಉಪನ್ಯಾಸ ಹಾಗೂ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗುವುದು. ಸಮುದಾಯದಲ್ಲಿ ಸಾಧನೆ ತೋರಿದ ಸಾಧಕರಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ನಗರಸಭೆ ವತಿಯಿಂದ ತ.ರಾ.ಸು ರಂಗಮಂದಿರದ ಸ್ವಚ್ಛತಾ ಕಾರ್ಯ ಹಾಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು. ತೋಟಗಾರಿಕೆ ಇಲಾಖೆ ವತಿಯಿಂದ ವೇದಿಕೆ ಕಾರ್ಯಕ್ರಮದ ಸ್ಥಳದಲ್ಲಿ ಹೂವಿನ ಕುಂಡಗಳನ್ನು ನೀಡಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇಲಾಖೆ ಅಧಿಕಾರಿಗಳು ತ.ರಾ.ಸು ರಂಗಮಂದಿರ ಕಾಯ್ದಿರಿಸುವುದರೊಂದಿಗೆ ಅಗತ್ಯ ಕಲಾತಂಡದ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ಮಹರ್ಷಿ ವಾಲ್ಮೀಕಿ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲರನ್ನೂ ಒಳಗೊಂಡಂತೆ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಹಾಗೂ ಜಯಂತಿ ಯಶಸ್ವಿಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ ಅವರು, ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ವಸತಿ ನಿಲಯ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ, ಉಪನ್ಯಾಸ ಮಾಲಿಕೆ ಕಾರ್ಯಕ್ರಮ ಹಮ್ಮಿಕೊಂಡು ವಾಲ್ಮೀಕಿ ಕುರಿತು ಅರಿವು ಮೂಡಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಕಚೇರಿ ಸ್ಥಳಾಂತರಿಸಿ: ಚಿತ್ರದುರ್ಗ ನಗರದ ಜೆಸಿಆರ್ 4ನೇ ಕ್ರಾಸ್ ಹತ್ತಿರ ಇರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ನಗರದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದ ಸಮೀಪ ಲಿಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಅಪರ ಜಿಲ್ಲಾಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾರದೊಳಗೆ ಕಚೇರಿ ಸ್ಥಳಾಂತರ ಮಾಡುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ ಅವರಿಗೆ ಅಪರ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ನಗರಸಭೆ ಆಯುಕ್ತೆ ರೇಣುಕಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸೇರಿದಂತೆ ಸಮಾಜದ ಮುಖಂಡರಾದ ಗೋಪಾಲಸ್ವಾಮಿ ನಾಯಕ, ಎಸ್.ಸಂದೀಪ್, ಜಿಲ್ಲಾ ನಾಯಕ ನೌಕರರ ಸಂಘದ ಅಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ ಸೇರಿದಂತೆ ಮತ್ತಿತರರು ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *