ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್02:
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದಿರುವ ಫಲಾನುಭವಿಗಳ ಸಮಾವೇಶವನ್ನು ಮಧ್ಯ ಕರ್ನಾಟಕದ ಚಿತ್ರದುರ್ಗದಲ್ಲಿ ಇದೇ ಮಾರ್ಚ್ 4ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿದ್ದು, ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಸಮಾವೇಶವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಯಶಸ್ವಿಗೊಳಿಸಬೇಕು ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಫಲಾನುಭವಿಗಳ ಸಮಾವೇಶದ ಪೂರ್ವಸಿದ್ಧತಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಜಿಲ್ಲೆಯಲ್ಲಿ ಲಕ್ಷಾಂತರ ಜನರು ವಿವಿಧ ಸವಲತ್ತುಗಳನ್ನು ಪಡೆದು ಫಲಾನುಭವಿಗಳಾಗಿದ್ದಾರೆ. ಫಲಾನುಭವಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಸಮಾವೇಶಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಕರೆತರುವ ಮೂಲಕ ಸಮಾವೇಶ ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಮುತುವರ್ಜಿಯಿಂದ ಸಕ್ರಿಯವಾಗಿ ತೊಡಗಿ, ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ನಗರಾಭಿವೃದ್ಧಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಕೊಳಚೆ ನಿರ್ಮೂಲನಾ ಮಂಡಳಿ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಆಹಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ವಿವಿಧ ಅಭಿವೃದ್ಧಿ ನಿಗಮಗಳ ವಿವಿಧ ಯೋಜನೆಗಳಡಿ ಜಿಲ್ಲೆಯ ಜನರು ವಿವಿಧ ಸೌಲಭ್ಯ ಪಡೆದಿದ್ದು, ಫಲಾನುಭವಿಗಳಾಗಿದ್ದಾರೆ. ಫಲಾನುಭವಿಗಳ ಸಮಾವೇಶಕ್ಕೆ ಕರೆತರುವುದು ಆಯಾ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಹಾಗಾಗಿ ಫಲಾನುಭವಿಗಳ ವಿವರ, ಬಸ್ ಸೌಲಭ್ಯದ ವ್ಯವಸ್ಥೆ, ಮಾರ್ಗದ ವಿವರ, ನೋಡಲ್ ಅಧಿಕಾರಿಗಳ ವಿವರ ಸೇರಿದಂತೆ ಸಮಗ್ರ ವಿವರದ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು.
ಫಲಾನುಭವಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಸಮರ್ಪಕವಾಗಿ ಮಾಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಜಿಲ್ಲೆಯಲ್ಲಿ ಕಳೆದ 5 ವರ್ಷದಿಂದ 75 ಲಕ್ಷ ಫಲಾನುಭವಿಗಳು ಇದ್ದಾರೆ. ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ 12 ಲಕ್ಷ ಫಲಾನುಭವಿಗಳು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಫಲಾನುಭವಿಗಳ ಸಮಾವೇಶ ಆಯೋಜನೆ ಸಂಬಂಧ ಫಲಾನುಭವಿಗಳನ್ನು ಕರೆತರಲು ಈಗಾಗಲೇ ಮೂರ್ನಾಲ್ಕು ಬಾರಿ ಸಭೆ ನಡೆಸಲಾಗಿದ್ದು, ಸಮಾವೇಶಕ್ಕೆ ಸುಮಾರು 75 ಸಾವಿರರಿಂದ 01 ಲಕ್ಷದವರೆಗೆ ಫಲಾನುಭವಿಗಳನ್ನು ಸೇರಿಸಲು ಇಲಾಖೆಗಳಿಗೆ ಗುರಿ ನಿಗಧಿಪಡಿಸಲಾಗಿದೆ. ಅಯಾ ಇಲಾಖೆ ಅಧಿಕಾರಿಗಳು ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆತರಲು ಅಗತ್ಯ ಕ್ರಮವಹಿಸಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಫಲಾನುಭವಿಗಳ ಸಮಾವೇಶದ ಪೂರ್ವಸಿದ್ಧತಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ ಫಲಾನುಭವಿಗಳ ಸಮಾವೇಶ ಯಶಸ್ವಿಗೆ ಸಹಕರಿಸಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments