ಬರ ನಿರ್ವಹಣೆ ಜವಾಬ್ದಾರಿಯಿಂದ ನಿಭಾಯಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ

by | 08/11/23 | ಸುದ್ದಿ


ಮಡಿಕೇರಿ ನ.08 ಕಳೆದ ಜುಲೈ ಕೊನೆ ವಾರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಸಂಬಂಧ ವರದಿ ನೀಡುವುದು ಹಾಗೂ ಬರ ನಿರ್ವಹಣೆಯನ್ನು ಜವಾಬ್ದಾರಿಯಿಂದ ನಿಭಾಯಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜುಲೈ ಕೊನೆ ವಾರದಲ್ಲಿ ಸುರಿದ ಧಾರಾಕಾರ ಮಳೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ ಅಂಗನವಾಡಿ, ಶಾಲೆ ಹಾಗೂ ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಹಾನಿ ಬಗ್ಗೆ ಮಾಹಿತಿ ಪಟ್ಟಿಯನ್ನು ತಾಲ್ಲೂಕುವಾರು ಒದಗಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಬರ ನಿರ್ವಹಣೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕೊಡಗು ಜಿಲ್ಲೆಗೆ 7.50 ಕೋಟಿ ರೂ. ಬಿಡುಗಡೆ ಮಾಡಿದೆ. ಆ ನಿಟ್ಟಿನಲ್ಲಿ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು. ಜೊತೆಗೆ ಜಾನುವಾರುಗಳಿಗೆ ಮೇವು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ವೆಂಕಟ್ ರಾಜಾ ಅವರು ಸೂಚಿಸಿದರು.
ಈ ಬಾರಿ ಕೊಡಗು ಜಿಲ್ಲೆಯ 5 ತಾಲ್ಲೂಕನ್ನು ಬರ ಪೀಡಿತವೆಂದು ಘೋಷಿಸಲಾಗಿದ್ದು, ಮುಂದಿನ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಬರ ನಿರ್ವಹಣೆಗೆ ಯಾವುದೇ ರೀತಿಯ ಹಣದ ಕೊರತೆ ಇಲ್ಲ. ಸರ್ಕಾರ ಕೊಡಗು ಜಿಲ್ಲೆಗೆ ಈಗಾಗಲೇ 750 ಲಕ್ಷ ರೂ. ಬಿಡುಗಡೆ ಮಾಡಿದೆ. ಆದ್ದರಿಂದ ಅಧಿಕಾರಿಗಳು ಪ್ರಥಮ ಆದ್ಯತೆಯಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದರು.
ಬರ ಪರಿಸ್ಥಿತಿಯಿಂದ ಹಾನಿಯಾಗಿರುವ ಬೆಳೆ ಸಂಬಂಧ ಕೃಷಿ ಇಲಾಖೆ ಅಧಿಕಾರಿಗಳು ಕೂಡಲೇ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಕೊಡಗು ಜಿಲ್ಲೆಯಲ್ಲಿ ಈ ಬಾರಿ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಶೇ.80 ರಷ್ಟು ಸರಾಸರಿ ಮಳೆಯಾಗಿದೆ. ಆದರೂ ಅಂತರ್ಜಲ ಕಡಿಮೆಯಾಗಿದೆ. ಆದ್ದರಿಂದ ಶಾಶ್ವತ ಕುಡಿಯುವ ನೀರು ಪೂರೈಕೆಗೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಲೋಕೋಪಯೋಗಿ, ಪಂಚಾಯತ್ ರಾಜ್, ನಗರಾಭಿವೃದ್ಧಿ, ಹೀಗೆ ಹಲವು ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿನ ಕಾರ್ಯಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಧಾನಮಂತ್ರಿ ಗ್ರಾಮ ಸ್ವರಾಜ್ ಯೋಜನೆಯಡಿ ನಿರ್ಮಿಸಿರುವ ರಸ್ತೆ ನಿರ್ವಹಣೆ ಮಾಡುವಂತೆ ತಿಳಿಸಿದರು.
ಪ್ರಾಕೃತಿಕ ವಿಕೋಪ ಹಾಗೂ ಬರ ನಿರ್ವಹಣೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಜಿಲ್ಲೆಯಲ್ಲಿರುವ ಗೋ ಶಾಲೆಗಳಿಗೆ ಮೇವು ಪೂರೈಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ತಾಲ್ಲೂಕು ಹಂತದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿ ಬರ ನಿರ್ವಹಣೆಯನ್ನು ಎದುರಿಸಲು ಮುಂದಾಗುವಂತೆ ತಹಶೀಲ್ದಾರರಿಗೆ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ಕಡಿಯುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಸಂಪರ್ಕ ಕಲ್ಪಿಸಲಾಗುತ್ತದೆ. ಜೊತೆಗೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಶಾಶ್ವತ ಕುಡಿಯುವ ನೀರಿನ ಮೂಲಗಳನ್ನು ಗುರುತಿಸಿ, ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಶುದ್ಧ ಕುಡಿಯುವ ನೀರು ಪೂರೈಸುವುದು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿ.ಪಂ.ಸಿಇಒ ಅವರು ಹೇಳಿದರು.
ವಿವೇಕ ಶಾಲೆ ಕಾಮಗಾರಿಗಳು ನಡೆಯುತ್ತಿವೆ. ಆದರೆ ಕರ್ನಾಟಕ ಪಬ್ಲಿಕ್ ಶಾಲೆಗಳ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಜಿ.ಪಂ.ಸಿಇಒ ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾಹಿತಿ ನೀಡಿ ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆ 223 ಮಿ.ಮೀ. ಆಗಿದ್ದು, ಈ ಬಾರಿ 251 ಮಿ.ಮೀ. ಮಳೆಯಾಗಿದೆ. ಹಾಗೆಯೇ ಅಕ್ಟೋಬರ್ ತಿಂಗಳಲ್ಲಿ ವಾಡಿಕೆ ಮಳೆ 197 ಮಿ.ಮೀ. ಆಗಿದ್ದು, ಈ ಬಾರಿ 166 ಮಿ.ಮೀ. ಮಳೆಯಾಗಿದೆ. ನವೆಂಬರ್ ತಿಂಗಳಲ್ಲಿ ವಾಡಿಕೆ ಮಳೆ 74 ಮಿ,ಮೀ. ಆಗಿದ್ದು, ಈ ಬಾರಿ ನವೆಂಬರ್ ಮೊದಲ ವಾರದಲ್ಲಿ 45 ಮಿ.ಮೀ. ಮಳೆಯಾಗಿದೆ ಎಂದು ವಿವರಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಈ ಬಾರಿ ಮಳೆ ಕೊರತೆಯಿಂದಾಗಿ ಸುಮಾರು 9791 ಹೆಕ್ಟೇರ್ ಪ್ರದೇಶದಲ್ಲಿ (ಭತ್ತ ಮತ್ತು ಮುಸುಕಿನ ಜೋಳ ಪ್ರದೇಶ) ಬೆಳೆ ಹಾನಿಯಾಗಿದ್ದು, ಅಂದಾಜು 838 ಲಕ್ಷ ರೂ ನಷ್ಟವಾಗಿದೆ. ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಎಸ್.ಎನ್.ನರಗುಂದ, ರಾಮಚಂದ್ರ, ಪ್ರಮೋದ್, ಕಿರಣ್ ಗೌರಯ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಪೌರಾಯುಕ್ತರಾದ ವಿಜಯ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಲೋಕೋಪಯೋಗಿ ಇಲಾಖೆ ಇಇ ಸಿದ್ದೇಗೌಡ, ಪಂಚಾಯತ್ ರಾಜ್ ಎಂಜಿನಿಯರ್‍ಗಳಾದ ಸುರೇಶ್ ಕುಮಾರ್, ಮುತ್ತುರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ತಾ.ಪಂ.ಇಒ ಶೇಖರ್, ಜಿಲ್ಲಾ ವಿಪತ್ತು ನಿರ್ವಹಣಾ ಸಮಾಲೋಚಕರಾದ ಅನನ್ಯ ವಾಸುದೇವ್, ನೀರಾವರಿ ಇಲಾಖೆಯ ಎಂಜಿನಿಯರ್‍ಗಳು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಇತರರು ಹಲವು ಮಾಹಿತಿ ನೀಡಿದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *