ಬೆಂಗಳೂರು ಆ.14ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ತಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀರ್ಣ ಮಂಜೂರು ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ.ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ದರೂ ದುರಸ್ತಿಯಾಗಿಲ್ಲ.
ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ಅಲ್ಲದೆ, ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದ್ದು, ಇದಕ್ಕೆಂದು ಪ್ರಾಯೋಗಿಕ ಆಯಪ್ ಸಿದ್ಧಪಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆಯಪ್ ನಲ್ಲಿ ನಮೂದಿಸಿದ್ದಾರೆ. ಈಗಾಗಲೇ ಶೇ.90 ರಷ್ಟು ಜಾಗಗಳಿಗೆ ಖುದ್ದು ಭೇಟಿ ನೀಡಲಾಗಿದೆ. ಹಲವೆಡೆ ಒತ್ತುವರಿ ಇರುವುದು ಗೊತ್ತಾಗಿದ್ದು ಸೆಪ್ಟೆಂಬರ್ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಭೂ ಒತ್ತುವರಿಯನ್ನೂ ತಹಶೀಲ್ದಾರ್ ಮೂಲಕ ತೆರವುಗೊಳಿಸಲಾಗುವುದು. ಮುಖ್ಯವಾಗಿ ಕೆರೆ-ಸ್ಮಶಾನ ಜಾಗವನ್ನು ಸರ್ವೇ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
0 Comments