ಸಚಿವರು, ಸಂಸದರು, ಶಾಸಕರ ಸಮ್ಮುಖದಲ್ಲಿ ದೂರದೃಷ್ಟಿ ಯೋಜನೆಗೆ ವಿದ್ಯುಕ್ತ ಚಾಲನೆ

by | 03/11/22 | ಸುದ್ದಿ

ಕೊಪ್ಪಳ, ನವೆಂಬರ್ 03 (ಕರ್ನಾಟಕ ವಾರ್ತೆ): ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇನ್ನಿತರ ಜನಪ್ರತಿನಿಧಿಗಳು ಮತ್ತು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯತಿ ದೂರ ದೃಷ್ಟಿ ಯೋಜನೆಗೆ ವಿದ್ಯುಕ್ತ ಚಾಲನೆ ಸಿಕ್ಕಿತು.
ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 2 ರಂದು ನಡೆದ 2ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ದೂರದೃಷ್ಟಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಸಚಿವರು, ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸುಸ್ಥಿರ ಅಭಿವೃದ್ಧಿ ತರಲು ಮುಂದಿನ ಐದು ವರ್ಷಗಳ ಗ್ರಾಮ ಪಂಚಾಯತಿ ದೂರದೃಷ್ಟಿ ಯೋಜನೆ ಸಹಕಾರಿಯಾಗಿದ್ದು, ಇದರಿಂದ ಗ್ರಾಮೀಣ ಭಾಗದ ಜನರ ಬದುಕಲ್ಲಿ ಪ್ರಗತಿ ಕಾಣಬಹುದು ಎಂದು ಹೇಳಿದರು.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 309(ಬಿ) ಪ್ರಕಾರ ಹೊಸದಾಗಿ ಗ್ರಾಮ ಪಂಚಾಯತಿಗಳು ರಚನೆಯಾದ ಮೂರು ತಿಂಗಳಲ್ಲಿ ಐದು ವರ್ಷಗಳ ದೂರದೃಷ್ಟಿ ಯೋಜನೆ ಸಿದ್ಧಪಡಿಸುವುದು ಕಡ್ಡಾಯವಾಗಿದೆ. ಅದರಂತೆ ದೂರದೃಷ್ಟಿ ಯೋಜನೆ ಸಿದ್ಧಪಡಿಸುವ ಬಗ್ಗೆ ಈಗಾಗಲೇ ನಿರ್ದಿಷ್ಟ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ನೀಡಲಾಗಿದೆ. ಅಲ್ಲದೆ ಎಲ್ಲ ಭಾಗೀದಾರರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುತ್ತಿದೆ. ಜಿಲ್ಲೆಯ ಪ್ರತಿ ಗ್ರಾಮದ ಅಭಿವೃದ್ಧಿ ಹಾಗೂ ಆ ಮೂಲಕ ಜಿಲ್ಲೆಯ ಪ್ರಗತಿಯನ್ನು ಸಾಧಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಈ ಯೋಜನೆಯಡಿ ಗ್ರಾಮ ಯೋಜನಾ ಸಮಿತಿ, ಗ್ರಾಮ ಪಂಚಾಯತಿ ಯೋಜನಾ ಸಮಿತಿ, ಗ್ರಾಮ ಪಂಚಾಯತಿ ಮಟ್ಟದ ಸ್ವ-ಸಹಾಯ ಸಂಘಗಳ ಒಕ್ಕೂಟದ ಪ್ರತಿನಿಧಿಗಳು, ಸಂಪನ್ಮೂಲ ವ್ಯಕ್ತಿಗಳು, ಪಂಚಾಯತಿ ಸಿಬ್ಬಂದಿ, ಗ್ರಾಮ ಪಂಚಾಯತಿಯ ಸದಸ್ಯರು, ಎನ್.ಜಿ.ಒ, ಸರ್ಕಾರೇತರ, ಸಿವಿಲ್ ಸೊಸೈಟಿ, ಹಿರಿಯ ನಾಗರಿಕರ ಸಂಘಗಳ ಪದಾಧಿಕಾರಿಗಳು ಎಲ್ಲರನ್ನು ಒಳಗೊಂಡಂತೆ ಸದಸ್ಯರಿಗೆ ದೂರದೃಷ್ಟಿ ಯೋಜನೆಯ ಬಗ್ಗೆ ಮಾಹಿತಿ ವಿನಿಮಯ ಕಾರ್ಯಕ್ರಮವನ್ನು ನಡೆಸಲಾಗುವುದು. ನಿಗದಿತ ವೇಳಾಪಟ್ಟಿಯಂತೆ ಜನವಸತಿ ಮತ್ತು ವಾರ್ಡ್ ಸಭೆಗಳನ್ನು ನಡೆಸಲಾಗುವುದು. ವಾಸ್ತವ ಸ್ಥಿತಿಯ ವಿಶ್ಲೇಷಣೆ ಮೂಲಕ ದೂರದೃಷ್ಟಿ ಯೋಜನೆಯ ಕರಡು ಯೋಜನೆಯನ್ನು ಸಿದ್ದಪಡಿಸಲಾಗುವುದು ಎಂದು ಅವರು ತಿಳಿಸಿದರು.
ಗ್ರಾಮ ಪಂಚಾಯತಿ ಮಟ್ಟದಲ್ಲಿ ಒಂದು ಬೃಹತ್ ಮೆರವಣಿಗೆಯನ್ನು ಆಯೋಜಿಸಿ ದೂರದೃಷ್ಟಿ ಯೋಜನೆ ತಯಾರಿಕಾ ಪ್ರಕ್ರಿಯೆಯಲ್ಲಿ ಜನರೆಲ್ಲರೂ ಭಾಗವಹಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ದೂರದೃಷ್ಟಿ ಯೋಜನೆಯ ಉದ್ದೇಶ, ಅದರ ಉಪಯೋಗಗಳ ಬಗ್ಗೆ ಜನರಿಗೆ ಅರ್ಥವಾಗುವ ರೀತಿಯಲ್ಲಿ ಕರಪತ್ರಗಳನ್ನು ಮುದ್ರಿಸಿ ಪ್ರತಿ ಮನೆಗೂ ತಲುಪಿಸಬೇಕು. ಎಲ್ಲ ಶಾಲೆ-ಪದವಿ ಪೂರ್ವ ಕಾಲೇಜುಗಳಲ್ಲಿ ದೂರದೃಷ್ಟಿ ಯೋಜನೆಯ ತಯಾರಿಯ ಬಗ್ಗೆ ಮತ್ತು ವಾರ್ಡಗಳಲ್ಲಿ ನಡೆಯುವ ಸಭೆಗಳಲ್ಲಿ ಹಿರಿಯರೊಂದಿಗೆ ಭಾಗವಹಿಸುವಂತೆ ಅರಿವು ಮೂಡಿಸಬೇಕು. ಆ ಮೂಲಕ ಎಲ್ಲರ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತಿ ದೂರದೃಷ್ಟಿ ಯೋಜನೆಯನ್ನು ಯಶಸ್ವಿಗೊಳಿಸಿ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ಮಾತನಾಡಿ, ಒಂದು ಉತ್ಕೃಷ್ಟ ಜನಸಹಭಾಗಿತ್ವದ ಎಲ್ಲರನ್ನೂ ಒಳಗೊಂಡಂತಹ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆಯನ್ನು ಸಿದ್ಧಪಡಿಸಿ ಪಂಚತಂತ್ರ 2.0 ನಲ್ಲಿ ಅಳವಡಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಅದಕ್ಕಾಗಿ ಎಲ್ಲರೂ ಕೈಜೋಡಿಸಿ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಸಭೆಯ ಮೂಲಕ ಮನವಿ ಮಾಡಿದರು.
ಈ ಸಂದರ್ಭ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್, ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಕೆ.ರಾಘವೇಂದ್ರ ಹಿಟ್ನಾಳ್, ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ದೀಪಿಕಾ ಬಾಜಪೈ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಮಂಜುನಾಥ ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
=============

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *